More

    ದ್ವಿತೀಯ ಪಿಯು ಪರೀಕ್ಷೆಗೆ ಸಿದ್ಧತೆ

    ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 4ರಿಂದ 23ರ ವರೆಗೆ ನಡೆಯಲಿದ್ದು, ಪರೀಕ್ಷೆಗೆ ಸಂಬಂಧಿಸಿದಂತೆ ಎಲ್ಲ ರೀತಿಯ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದರು.
    ಮಂಗಳವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಪೂರ್ವ ಸಿದ್ಧತೆ ಸಭೆ ನಡೆಸಿದರು. ಜಿಲ್ಲೆಯಲ್ಲಿ ಒಟ್ಟು 51 ಪರೀಕ್ಷಾ ಕೇಂದ್ರಗಳಿದ್ದು ಮಂಗಳೂರಿನಲ್ಲಿ 24, ಮೂಡುಬಿದಿರೆ 4, ಬಂಟ್ವಾಳ 7, ಪುತ್ತೂರು 9, ಬೆಳ್ತಂಗಡಿ 4, ಸುಳ್ಯದಲ್ಲಿ 3 ಪರೀಕ್ಷೆ ಕೇಂದ್ರಗಳಿವೆ.
    ಪರೀಕ್ಷೆಗೆ 17,137 ಬಾಲಕ ಮತ್ತು 17,209 ಬಾಲಕಿಯರ ಸಹಿತ 34,346 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದಾರೆ. ಕಲಾ ವಿಭಾಗದಲ್ಲಿ 4532, ವಾಣಿಜ್ಯ 16,237, ವಿಜ್ಞಾನ ವಿಭಾಗದಲ್ಲಿ 13,577 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು.
    ಸಹಾಯಕ ಆಯುಕ್ತ ಮದನ್ ಮೋಹನ್, ಡಿಡಿಪಿಯು ವಿಷ್ಣು ಮೂರ್ತಿ, ಡಿಡಿಪಿಐ ಮಲ್ಲೇಸ್ವಾಮಿ, ಇಲಾಖೆಯ ಅಧಿಕಾರಿಗಳು, ಕಾಲೇಜು ಮುಖ್ಯಸ್ಥರು ಮತ್ತು ಮತ್ತಿತರು ಉಪಸ್ಥಿತರಿದ್ದರು.

    ಅಕ್ರಮ ತಡೆಗೆ ಬಂದೋಬಸ್ತ್
    ಉಡುಪಿ: ದ್ವಿತೀಯ ಪಿಯುಸಿ ಪರೀಕ್ಷೆ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ, ಪ್ರಶ್ನೆ ಪತ್ರಿಕೆ ಇಡಲಾಗುವ ಜಿಲ್ಲಾ ಖಜಾನೆ ಸೇರಿದಂತೆ ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಕ್ಯಾಮರಾಗಳನ್ನು ಅಳವಡಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದ್ದಾರೆ.
    ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ದ್ವಿತೀಯ ಪಿಯುಸಿ ಪರೀಕ್ಷೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಶ್ನೆ ಪತ್ರಿಕೆಗಳನ್ನು ವಿತರಿಸಲು ತಹಸೀಲ್ದಾರ್‌ಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ 8 ತಂಡಗಳನ್ನು ರಚಿಸಲಾಗಿದೆ. ಪ್ರಶ್ನೆ ಪತ್ರಿಕೆ ಸಾಗಿಸುವ ಎಲ್ಲ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದ್ದು, ಸೂಕ್ತ ಪೊಲೀಸ್ ಭದ್ರತೆಯೊಂದಿಗೆ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಅವಧಿಯೊಳಗೆ ಪ್ರಶ್ನೆ ಪತ್ರಿಕೆ ತಲುಪಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಾಗೂ ಬೆಂಗಳೂರಿನ ಪಿಯು ಬೋರ್ಡ್ ಕಂಟ್ರೋಲ್ ರೂಂನಲ್ಲಿ ಇದನ್ನು ವೀಕ್ಷಿಸಲು ವ್ಯವಸ್ಥೆಯಿದೆ ಎಂದರು.
    ಪ್ರಶ್ನೆ ಪತ್ರಿಕೆಗಳನ್ನು ದಾಸ್ತಾನು ಇರಿಸುವ ಜಿಲ್ಲಾ ಖಜಾನೆಯಲ್ಲಿ ಬಯೋ ಮೆಟ್ರಿಕ್ ಹಾಜರಾತಿ ಮತ್ತು ಬಾರ್‌ಕೋಡ್ ರೀಡರ್‌ಗಳನ್ನು ಅಳವಡಿಸಲಾಗುತ್ತದೆ. ಪರೀಕ್ಷೆ ಮುಗಿದ ಬಳಿಕ ಉತ್ತರ ಪತ್ರಿಕೆಗಳನ್ನು ಸುರಕ್ಷಿತವಾಗಿ ಸಾಗಿಸಲು ಅಂಚೆ ಇಲಾಖಾಧಿಕಾರಿಗಳಿಗೆ ಸೂಚಿಸಲಾಗಿದೆ. ಹಿರಿಯ ಪ್ರಾಂಶುಪಾಲರ ನೇತೃತ್ವದಲ್ಲಿ ಜಾಗೃತ ತಂಡಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದರು.
    ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಾರುತಿ, ಡಿಡಿಪಿಐ ಶೇಷಶಯನ ಕಾರಿಂಜ, ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್ ಮೊದಲಾದವರಿದ್ದರು.

    15 ಸಾವಿರ ವಿದ್ಯಾರ್ಥಿಗಳು: ಉಡುಪಿ ಜಿಲ್ಲೆಯ 27 ಪರೀಕ್ಷಾ ಕೇಂದ್ರಗಳಲ್ಲಿ 15,100 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಇದರಲ್ಲಿ 13,802 ಹೊಸದಾಗಿ, 493 ಪುನಾರಾವರ್ತನೆ, 805 ಖಾಸಗಿಯಾಗಿ ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ 7733 ಹೆಣ್ಣು ಮಕ್ಕಳು ಮತ್ತು 7367 ಗಂಡುಮಕ್ಕಳು. ಸೈನ್ಸ್, ಆರ್ಟ್ಸ್ ಮತ್ತು ಕಾಮರ್ಸ್ ವಿಭಾಗದಲ್ಲಿ ಕ್ರಮವಾಗಿ 5075, 1789 ಮತ್ತು 8236 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts