More

    ಮಾದಕ ವಸ್ತುಗಳ ನಿಷೇಧಕ್ಕೆ ಜಾಗೃತಿ ಅಗತ್ಯ

    ಚಾಮರಾಜನಗರ : ಜಿಲ್ಲೆಯಲ್ಲಿ ಇತ್ತೀಚೆಗೆ ಗಾಂಜಾ ಬೆಳೆಯುವುದು ಹೆಚ್ಚಾಗಿ ಕಂಡುಬರುತ್ತಿದ್ದು, ಮಾದಕ ವಸ್ತುಗಳ ನಿಷೇಧಕ್ಕೆ ಹೆಚ್ಚಿನ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶೆ ಬಿ.ಎಸ್.ಭಾರತಿ ಸಲಹೆ ನೀಡಿದರು.

    ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮನೋನಿಧಿ ಮತ್ತು ಜೆಎಸ್‌ಎಸ್ ಸ್ಕೂಲ್ ಆಫ್ ನರ್ಸಿಂಗ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಣೆ ವಿರೋಧಿ ದಿನದ ಅಂಗವಾಗಿ ಬುಧವಾರ ಆಯೋಜಿಸಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

    ಮಾದಕ ವಸ್ತುಗಳ ಸೇವನೆಯಿಂದ ಹಲವಾರು ಸಮಸ್ಯೆಗಳನ್ನು ಅನುಭವಿಸಬೇಕಾಗುತ್ತದೆ. ಮಾದಕ ವಸ್ತುಗಳಲ್ಲಿ ಇತ್ತೀಚೆಗೆ ಮೊಬೈಲ್ ಕೂಡ ಒಂದು ಎಂದು ಹೇಳಲಾಗುತ್ತಿದೆ. ಮಕ್ಕಳು ಹೆಚ್ಚಾಗಿ ಮೊಬೈಲ್ ಬಳಕೆ ಮಾಡುವುದರಿಂದ ಹಲವು ತೊಂದರೆ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಒಬ್ಬೊಬ್ಬರು ನೂರು ಜನರಿಗೆ ಮಾದಕ ವಸ್ತುಗಳ ನಿಷೇಧ ಮತ್ತು ಮಾನವ ಕಳ್ಳಸಾಗಣೆ ಬಗ್ಗೆ ಜಾಗೃತಿ ಮೂಡಿಸಿದರೆ ಸಮಾಜದಲ್ಲಿ ಇದನ್ನು ನಿರ್ಮೂಲನೆ ಮಾಡಬಹುದಾಗಿದೆ ಎಂದು ತಿಳಿಸಿದರು.

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಿದಂಬರ ಮಾತನಾಡಿ, ದೇಹದಲ್ಲಿ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ಗುಣಪಡಿಸಲು ಡ್ರಗ್ಸ್ ಅವಶ್ಯಕತೆ ಇದೆ. ಆದರೆ ಅದೇ ಚಟವಾಗಬಾರದು. ಯಾವುದೇ ಔಷಧ ಮಾನವನ ದೇಹಕ್ಕೆ ಒಗ್ಗದೆ ಇದ್ದರೆ ಅದು ವಿಷವಾಗುತ್ತದೆ. ವೈದ್ಯರ ಮಾರ್ಗದರ್ಶನದಂತೆ ಎಷ್ಟು ಪ್ರಮಾಣದಲ್ಲಿ ಔಷಧ ಸೇವನೆ ಮಾಡಬೇಕು ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಮಾನಸಿಕ ರೋಗಗಳ ನಿಯಂತ್ರಣಾಧಿಕಾರಿ ಡಾ.ಚಂದ್ರಶೇಖರ್, ತಾಲೂಕು ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ್, ಡಾ.ರಾಜೇಶ್, ಸಿಮ್ಸ್ ನರ್ಸಿಂಗ್ ಶಾಲೆಯ ಪದ್ಮ, ಪಟ್ಟಣ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ರಾಜೇಶ್ ಹಾಗೂ ಇತರರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts