More

    ಸವಲತ್ತು ಪಡೆಯಲು ಸಂಘಟಿತ ಹೋರಾಟ ಅಗತ್ಯ

    ಹನೂರು: ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಸಮರ್ಪಕವಾಗಿ ಪಡೆಯಲು ಹಾಗೂ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕಾದರೆ ಪ್ರತಿಯೊಬ್ಬರೂ ಸಂಘಟಿತರಾಗಬೇಕು ಎಂದು ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ತಿಳಿಸಿದರು.

    ಪಟ್ಟಣದ ಆರ್.ಎಸ್ ದೊಡ್ಡಿಯಲ್ಲಿ ಸೋಮವಾರ ಹನೂರು, ಬೆಳತ್ತೂರು, ಸಿರಗೊಡು ಹಾಗೂ ಉದ್ದನೂರು ಗ್ರಾಮದ ರೈತ ಸಂಘ ಹಾಗೂ ಹಸಿರು ಸೇನೆಯ ಗ್ರಾಮ ಘಟಕವನ್ನು ಸಾಮೂಹಿಕವಾಗಿ ಉದ್ಘಾಟಿಸಿ ಮಾತನಾಡಿದರು. ಹನೂರು ಭಾಗದಲ್ಲಿ ಹೆಚ್ಚಿನ ರೈತರು ಕೃಷಿ ಮಾಡುತ್ತಿದ್ದಾರೆ. ಆದರೆ ಸರ್ಕಾದ ಸವಲತ್ತುಗಳು ಸಮರ್ಪಕವಾಗಿ ಸಿಗುತ್ತಿಲ್ಲ. ಜತೆಗೆ ರೈತರು ಹಲವು ಸಮಸ್ಯೆ ಎದುರಿಸುತ್ತಿದ್ದಾರೆ. ಇದರಿಂದ ಕೃಷಿಯಲ್ಲಿ ಹಿನ್ನಡೆ ಸಾಧಿಸುವಂತಾಗಿದೆ. ಇತ್ತ ಕಾಡು ಪ್ರಾಣಿಗಳು ಜಮೀನಿಗೆ ಲಗ್ಗೆ ಇಟ್ಟು ಫಸಲು ನಾಶಪಡಿಸುತ್ತಿದ್ದು, ನಷ್ಟ ಅನುಭವಿಸುವಂತಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಇದರಿಂದ ರೈತರು ತೊಂದರೆ ಪಡುತ್ತಿದ್ದಾರೆ. ಆದರೂ ರೈತರು ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ಪ್ರಯತ್ನ ಮಾಡುತ್ತಿಲ್ಲ. ಆದ್ದರಿಂದ ಈ ಬಗ್ಗೆ ಪ್ರತಿಯೊಬ್ಬರೂ ಮನದಟ್ಟು ಮಾಡಿಕೊಂಡು ಒಗ್ಗಟ್ಟಿನಿಂದ ಸಂಘಟಿತರಾಗಬೇಕು. ಜತೆಗೆ ಪ್ರಶ್ನಿಸುವ ಮನೋಭಾವನೆ ಬೆಳೆಸಿಕೊಳ್ಳಬೇಕು. ಈ ದೆಸೆಯಲ್ಲಿ ಗ್ರಾಮ ಘಟಕಗಳನ್ನು ಉದ್ಘಾಟಿಸುತ್ತಿರುವುದು ಸ್ಫೂರ್ತಿದಾಯಕ ಎಂದು ತಿಳಿಸಿದರು.

    ಗ್ರಾಮ ಘಟಕ ಅಧ್ಯಕ್ಷ ಎಸ್.ಮಾದಪ್ಪ ಮಾತನಾಡಿ, ಹನೂರು ಭಾಗದಲ್ಲಿ ಕೃಷಿ ಮಾಡಲು ರೈತರಿಗೆ ಕಾಡು ಪ್ರಾಣಿಗಳ ಹಾವಳಿ ಒಂದು ದೊಡ್ಡ ಸಮಸ್ಯೆಯಾಗಿದೆ. ಆದರೆ ರೈತರು ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಮುಂದಾಗುತ್ತಿಲ್ಲ. ಇದರಿಂದ ಕೃಷಿಯಲ್ಲಿ ತೊಂದರೆ ಪಡುವಂತಾಗಿದೆ. ಇದೀಗ ಸಂಘ ಉದ್ಘಾಟನೆಯಾಗಿರುವುದು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅನುಕೂಲ. ಆದ್ದರಿಂದ ಪ್ರತಿಯೊಬ್ಬರೂ ಸಂಘದ ಕಾರ್ಯಚಟುವಟಿಕೆಗಳಲ್ಲಿ ಭಾಗಿಯಾಗಬೇಕು ಎಂದರು.

    ಜಿಲ್ಲಾ ಸಂಘದ ಖಜಾಂಚಿ ಅಂಬಳೆ ಶಿವಕುಮಾರ್, ಹನೂರು ಘಟಕಾಧ್ಯಕ್ಷ ಚಂಗಡಿ ಕರಿಯಪ್ಪ, ಗ್ರಾಮ ಘಟಕದ ಅಧ್ಯಕ್ಷರಾದ ರಾಜು, ಶ್ರೀನಿವಾಸ್, ಉಪಾಧ್ಯಕ್ಷ ಮಹದೇವಶೆಟ್ಟಿ, ಕಾರ್ಯದರ್ಶಿ ಮಾದಪ್ಪ, ಖಜಾಂಚಿ ನಟರಾಜು, ರೈತ ಮುಖಂಡರಾದ ಶ್ರೀನಿವಾಸ್, ನಾಗರಾಜು, ಪ್ರಭು, ಚೆಲುವರಾಜು, ಮಾದಯ್ಯ, ರಾಜನ್, ಸೆಲ್ವಮ್, ಕುಮಾರಸ್ವಾಮಿ, ಸ್ವಾಮಿನಂದನ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts