More

    ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗಕ್ಕಾಗಿ ಪ್ರತಿಭಟನೆ

    ಚಿಕ್ಕಮಗಳೂರು: ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ಎಂಬ ಘೋಷಣೆಯೊಂದಿಗೆ ಜು.೧ ರಂದು ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬೃಹತ್ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಅಶೋಕ್ ಕೆಂಪನಹಳ್ಳಿ ತಿಳಿಸಿದರು.

    ನಗರದ ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲಾ ರೀತಿಯ ಉದ್ಯೋಗವನ್ನೂ ಕನ್ನಡಿಗರಿಗೆ ಮೀಸಲಿಡಬೇಕು ಎಂದು ಡಾ. ಸರೋಜನಿ ಮಹಿಷಿ ವರದಿ ನೀಡಿದ್ದಾರೆ. ಈ ವರದಿಯನ್ನು ಜಾರಿಗೆ ತರುವಂತೆ ಆಗ್ರಹಿಸಿ ಜು.೧ ರಂದು ಪ್ರತಿಭಟನೆ ನಡೆಸಲು ಕರೆ ನೀಡಲಾಗಿದೆ ಎಂದರು.
    ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಜ. ೧ರಂದು ಬೆಳಗ್ಗೆ ೧೧ ಗಂಟೆಗೆ ಪ್ರತಿಭಟನೆ ನಡೆಸಲಾಗುತ್ತದೆ. ಡಾ. ಸರೋಜಿನಿ ಮಹಿಷಿ ವರದಿ ಸಮರ್ಪಕವಾಗಿ ಜಾರಿಯಾಗದ ಹಿನ್ನೆಲೆಯಲ್ಲಿ ಕನ್ನಡದ ಯುವ ಸಮುದಾಯ ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ. ಹೊರ ರಾಜ್ಯಗಳಿಂದ ಆಗಮಿಸುತ್ತಿರುವ ವಲಸಿಗರ ಹಾವಳಿಯಿಂದಾಗಿ ರಾಜ್ಯದಲ್ಲಿ ಉದ್ಯೋಗಾವಕಾಶಗಳು ಕನ್ನಡಿಗರಿಗೆ ಮರೀಚಿಕೆಯಾಗಿದೆ ಎಂದು ಆರೋಪಿಸಿದರು.
    ಕೈಗಾರಿಕಾ ಉದ್ಯೋಗಸ್ಥಾಯಿ ಆದೇಶ ಕಾಯ್ದೆ ೧೯೪೬ರ ಅನ್ವಯ ರಾಜ್ಯ ಸರ್ಕಾರ ಬಲಿಷ್ಠವಾದ ಕಾನೂನು ರೂಪಿಸಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸಬೇಕು. ಜೊತೆಗೆ ಎಲ್ಲ ಖಾಸಗಿ ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಶೇ. ೧೦೦ ರಷ್ಟು ಹುದ್ದೆಗಳು ಕನ್ನಡಿಗರಿಗೆ ಒದಗಿಸುವಂತೆ ಆಗ್ರಹಿಸಿದರು.
    ಎಲ್ಲ ಖಾಸಗಿ ಸಂಸ್ಥೆಗಳ ಇತರೆ ಹುದ್ದೆಗಳಲ್ಲಿ ಶೇ. ೮೦ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕು. ೧೫ ವರ್ಷಗಳ ಕಾಲ ರಾಜ್ಯದಲ್ಲಿ ನೆಲೆಸಿದವರನ್ನು ಕನ್ನಡಿಗರೆಂದು ಪರಿಗಣಿಸುವ ನಿಯಮವಿದೆ. ಇವರಿಗೆ ಕಡ್ಡಾಯವಾಗಿ ಕನ್ನಡ ಬರವಣಿಗೆಯ ಪರೀಕ್ಷೆಯನ್ನು ನೀಡಿ, ಅದರಲ್ಲಿ ತೇರ್ಗಡೆ ಹೊಂದಿದವರನ್ನು ಮಾತ್ರ ಕನ್ನಡಿಗರೆಂದು ಪರಿಗಣಿಸಬೇಕು ಎಂದು ಒತ್ತಾಯಿಸಿದರು.
    ಈ ಸಂಬAಧ ರಾಜ್ಯಸರ್ಕಾರ ರೂಪಿಸುವ ಕಾನೂನನ್ನು ಸಮರ್ಪಕವಾಗಿ ಜಾರಿಗೆ ತರಲು ಕನ್ನಡ ಅಭಿವೃದ್ಧಿ ಪಾಧಿಕಾರಕ್ಕೆ ಹೆಚ್ಚಿನ ಅಧಿಕಾರವನ್ನು ನೀಡಬೇಕು. ಮುಂದೆ ಕಾನೂನು ಸಮಸ್ಯೆಗಳು ಎದುರಾದರೆ ಅದನ್ನು ಸಮರ್ಥವಾಗಿ ಎದುರಿಸಲು ವಕೀಲರ ತಂಡವನ್ನು ಸಿದ್ದಪಡಿಸಬೇಕು ಎಂದು ಆಗ್ರಹಿಸಿದರು.
    ಸುದ್ದಿಗೋಷ್ಟಿಯಲ್ಲಿ ಕರವೇ ಜಿಲ್ಲಾ ಉಪಾಧ್ಯಕ್ಷ ಕೋಟೆ ಮಲ್ಲೇಶ, ಯುವ ಘಟಕದ ಜಿಲ್ಲಾಧ್ಯಕ್ಷ ಕುಮಾರ್ ಆರ್.ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಯುವರಾಜ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ರುದ್ರೇಶ್ ಸಿಂಹಾದ್ರಿ, ಭರತ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts