More

    ಕೊಲೆ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆಯಾಗಲಿ

    ಸೋಮವಾರಪೇಟೆ: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ವೀರಶೈವ-ಲಿಂಗಾಯತ ಸಮಾಜ ವತಿಯಿಂದ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಯಿತು.

    ಕಲ್ಲುಮಠದ ಶ್ರೀಮಹಾಂತ ಸ್ವಾಮೀಜಿ ಮಾತನಾಡಿ, ಪ್ರಸ್ತುತ ಸಮಾಜದಲ್ಲಿ ಹಿಂಸೆ, ಕ್ರೌರ್ಯ ಹೆಚ್ಚುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ರೇಣುಕಸ್ವಾಮಿಯನ್ನು ಹಿಂಸಿಸಿ ಕೊಲೆ ಮಾಡಿದ್ದಾರೆ. ಅವರ ಕುಟುಂಬ ಅನಾಥವಾಗಿದೆ. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು ಎಂದರು.

    ಇಂತಹ ಕೃತ್ಯಗಳು ನಡೆದಿರುವುದು ಮಾನವ ಸಂಕುಲಕೆ ಕಳಂಕ. ಇನ್ನು ಮುಂದೆ ಈ ರೀತಿಯ ಕೃತ್ಯಗಳು ನಡೆಯದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದರು.

    ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಮಾತನಾಡಿ, ಆರೋಪಿ ಸ್ಥಾನದಲ್ಲಿರುವ ನಟ ದರ್ಶನ್ ಮಾಡಿರುವ ಕಾರ್ಯ ನಾಗರಿಕ ಸಮಾಜ ತಲೆತಗ್ಗಿಸುವಂತಹದ್ದು. ಸಮಾಜ ತಿದ್ದುವಂತಹ ಜವಾಬ್ದಾರಿ ಇರುವವರು ಕಾನೂನನ್ನು ಕೈಗೆ ತೆಗೆದುಕೊಂಡಿದ್ದು ಸರಿಯಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

    ನಂತರ ಶಿರಸ್ತೇದಾರ್ ಸುಶೀಲಾ ಅವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಮುದ್ದಿನ ಕಟ್ಟೆ ಮಠದ ಶ್ರೀ ಅಭಿನವ ಸಿದ್ದಲಿಂಗ ಸ್ವಾಮೀಜಿ, ಕಲ್ಲಳ್ಳಿ ಮಠದ ಶ್ರೀ ರುದ್ರಮುನಿ ಸ್ವಾಮೀಜಿ, ಶಿಡಿಗಳಲೆ ಮಠದ ಶ್ರೀ ಇಮ್ಮಡಿ ಶಿವಲಿಂಗ ಸ್ವಾಮೀಜಿ, ಜಿಲ್ಲಾ ವೀರಶೈವ-ಲಿಂಗಾಯತ ಸಂಘಟನಾ ವೇದಿಕೆ ಅಧ್ಯಕ್ಷ ದಿವಾಕರ, ಜಿಲ್ಲಾ ವೀರಶೈವ ಲಿಂಗಾಯತ ಅರ್ಚಕರ ಸಂಘದ ಗೌರವಾಧ್ಯಕ್ಷ ಮೋಹನ ಮೂರ್ತಿ, ಸೋಮವಾರಪೇಟೆ ವೀರಶೈವ ಸಮಾಜದ ಶೆಟ್ರು ಮೃತ್ಯುಂಜಯ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts