More

    ಲೋಕಸಭೆ ಚುನಾವಣೆ ನಂತರ ಗ್ಯಾರಂಟಿ ಸ್ಥಗಿತ

    ಹುಬ್ಬಳ್ಳಿ : ಲೋಕಸಭೆ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಭರವಸೆಗಳನ್ನು ಸ್ಥಗಿತಗೊಳಿಸುವ ಲಕ್ಷಣ ಗೋಚರಿಸುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

    ಹುಬ್ಬಳ್ಳಿಯಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ನಂತರ ಗ್ಯಾರಂಟಿ ಭರವಸೆಗಳು ಸ್ಥಗಿತಗೊಳ್ಳುವ ಬಗ್ಗೆ ಶಾಸಕ ಬಾಲಕೃಷ್ಣ ಹೇಳಿರುವುದರಲ್ಲಿ ಅರ್ಥ ಇದೆ. ರಾಜ್ಯ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಗ್ಯಾರಂಟಿ ಭರವಸೆಗಳನ್ನು ಸರ್ಕಾರದ ಬಳಿ ಈಡೇರಿಸಲು ಹಣ ಇಲ್ಲ. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಸಾಧ್ಯವಾಗುತ್ತಿಲ್ಲ ಎಂದರು.

    ಸರ್ಕಾರಕ್ಕೆ ಹಣ ಕ್ರೂಢೀಕರಣ ಮಾಡಲು ಆಗುತ್ತಿಲ್ಲ. ಹೀಗಾಗಿ, ಗ್ಯಾರಂಟಿ ಭರವಸೆಗಳನ್ನು ಸ್ಥಗಿತಗೊಳಿಸುವ ಬಗ್ಗೆ ಮುಖ್ಯಮಂತ್ರಿ ಅವರು ತಮ್ಮ ಶಾಸಕರ ಮುಖಾಂತರ ಹೇಳಿಸಿರುವ ಸಾಧ್ಯತೆ ಇದೆ ಎಂದರು.

    ಬಿಜೆಪಿ ತೊರೆದ ಇನ್ನೂ ಅನೇಕರು ಮುಂದಿನ ದಿನಗಳಲ್ಲಿ ಪಕ್ಷಕ್ಕೆ ವಾಪಸ್ಸಾಗುತ್ತಾರೆ. ಅನೇಕರೊಂದಿಗೆ ಮಾತುಕತೆ ನಡೆದಿದ್ದು, ಶೀಘ್ರದಲ್ಲೇ ಎಲ್ಲವೂ ಬಹಿರಂಗಗೊಳ್ಳಲಿದೆ. ಸಧ್ಯಕ್ಕೆ ನಮ್ಮ ಗುರಿ ರಾಜ್ಯದ 28 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುವುದು ಎಂದು ತಿಳಿಸಿದರು.

    ಧಾರವಾಡ ಜಿಲ್ಲೆ ಸೇರಿದಂತೆ ರಾಜ್ಯದ ಯಾವುದೇ ಭಾಗದಲ್ಲಿ ಭಿನ್ನಾಭಿಪ್ರಾಯ, ಗುಂಪುಗಾರಿಕೆ ಇದ್ದರೆ ಎಲ್ಲವನ್ನೂ ಸರಿಪಡಿಸುತ್ತೇವೆ. ಎಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದರು.

    ದಕ್ಷಿಣ ಭಾರತದ ಪ್ರತ್ಯೇಕ ಕೂಗು ಎತ್ತುವ ಮೂಲಕ ಸಂಸದ ಡಿ.ಕೆ. ಸುರೇಶ ಅವರು ಬೇಜವಾಬ್ದಾರಿತನದಿಂದ ವರ್ತಿಸಿದ್ದಾರೆ. ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಭಾರತದ ಸಾರ್ವಭೌಮತೆ ಮತ್ತು ಅಖಂಡತೆ ಕಾಪಾಡುವ ಪ್ರತಿಜ್ಞೆ ಮರೆತಂತೆ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಹುಬ್ಬಳ್ಳಿಯಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂವಿಧಾನದ 75ನೇ ವರ್ಷ ಆಚರಣೆ ಸಂದರ್ಭದಲ್ಲಿ ಸಂಸದರೊಬ್ಬರು ದೇಶ ಇಬ್ಭಾಗದ ಕುರಿತು ಮಾತನಾಡಿರುವುದು ಸರಿ ಅಲ್ಲ. ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿ ಅರಿತು ಮಾತನಾಡಬೇಕು ಎಂದರು.

    ಈ ಹಿಂದೆ ಯುಪಿಎ ಸರ್ಕಾರದಲ್ಲಿ ಮನಮೋಹನಸಿಂಗ್ ಪ್ರಧಾನಿ ಆಗಿದ್ದ ಸಂದರ್ಭದಲ್ಲಿ 2004ರಿಂದ 2014ರವರೆಗೆ ಕರ್ನಾಟಕಕ್ಕೆ 60 ಸಾವಿರ ಕೋಟಿ ರೂ. ಅನುದಾನ ನೀಡಿದ್ದರು. ನರೇಂದ್ರ ಮೋದಿ ಪ್ರಧಾನಿಯಾದ ನಂತರ ರಾಜ್ಯಕ್ಕೆ 2 ಲಕ್ಷ 36 ಸಾವಿರ ಕೋಟಿ ರೂ. ಅನುದಾನ ನೀಡಿದ್ದಾರೆ. ಯುಪಿಎ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ 81 ಸಾವಿರ ಕೋಟಿ ರೂ. ತೆರಿಗೆ ಹಣ ನೀಡಿದ್ದರೆ, ಪ್ರಧಾನಿ ನರೇಂದ್ರ ಮೋದಿ ಅವಧಿಯಲ್ಲಿ 2 ಲಕ್ಷ 82 ಸಾವಿರ ಕೋಟಿ ರೂ. ಹಣ ಬಂದಿದೆ ಎಂದು ವಿವರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts